ಬೀರೂರು (ಚಿಕ್ಕಮಗಳೂರು): ಕೌಟುಂಬಿಕ ಕಲಹದಿಂದ ಬೇಸತ್ತು ಪೊಲೀಸ್ ಉಪನಿರೀಕ್ಷಕರ (PSI) ಪತ್ನಿಯೊಬ್ಬರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ನಡೆದಿದೆ.
ಬೀರೂರು ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಪ್ಪೇಶ್ ಅವರ ಪತ್ನಿ ಪದ್ಮ (34) ಮೃತಪಟ್ಟ ದುರ್ದೈವಿ. ಕಳೆದ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪದ್ಮ ಅವರು ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತ ಪದ್ಮ ಹಾಗೂ ತಿಪ್ಪೇಶ್ ಅವರು ಪ್ರೀತಿಸಿ ಮದುವೆಯಾಗಿದ್ದು, ಇವರಿಗೆ ಇಬ್ಬರು ಮಕ್ಕಳಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮಕ್ಕಳಿಗೆ ಬೇಸಿಗೆ ರಜೆ ಇರುವುದರಿಂದ ಅವರನ್ನು ಊರಿಗೆ ಕಳುಹಿಸುವ ವಿಚಾರವಾಗಿ ದಂಪತಿಗಳ ನಡುವೆ ಸಣ್ಣ ಮಟ್ಟದ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಮನನೊಂದು ಪದ್ಮ ಅವರು ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಸದ್ಯ ಪದ್ಮ ಅವರ ಪಾರ್ಥಿವ ಶರೀರವನ್ನು ಕುಟುಂಬಸ್ಥರು ಬರುವವರೆಗೆ ಪೊಲೀಸರು ಸಂರಕ್ಷಿಸಿದ್ದು, ಮರಣೋತ್ತರ ಪರೀಕ್ಷೆಯ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಗುವುದು.
ಈ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.