ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಾದಕ ವಸ್ತುಗಳ ವಹಿವಾಟಿನ ವಿರುದ್ಧ ಸಮರ ಸಾರಿರುವ ಪೊಲೀಸರು, ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಒಡಿಶಾ ರಾಜ್ಯದ ಮೂಲದ ಸ್ವರ್ಣಲತಾ ನಾಯಕ್ ಮತ್ತು ಸುಲ್ತಾನ್ ಪ್ರಧಾನ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿ ಜಾಬೀರ್ ಎಂದು ಗುರುತಿಸಲಾಗಿದೆ. ಈ ತಂಡವು ಹೊರ ರಾಜ್ಯದಿಂದ ಗಾಂಜಾ ತಂದು ಜಿಲ್ಲೆಯಲ್ಲಿ ಮಾರಾಟ ಮಾಡಲು ಸಂಚು ರೂಪಿಸಿತ್ತು ಎನ್ನಲಾಗಿದೆ.
ಮಡಿಕೇರಿ ತಾಲ್ಲೂಕಿನ ಇಬ್ನಿವಳವಾಡಿ ಗ್ರಾಮದ ಬಳಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಈ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆರೋಪಿಗಳ ವಶದಲ್ಲಿದ್ದ ಸುಮಾರು 15 ಕೆ.ಜಿ 903 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ಮೂರು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ.
ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಜಾಲದ ಹಿಂದೆ ಇನ್ನು ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
ಜಿಲ್ಲೆಯನ್ನು ಮಾದಕ ಮುಕ್ತವನ್ನಾಗಿಸಲು ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಇದ್ದರೆ ಸಾರ್ವಜನಿಕರು ಪೊಲೀಸರಿಗೆ ತಿಳಿಸಲು ಕೋರಲಾಗಿದೆ.