Police Roundup

ಶಿವಾಜಿನಗರ ಗೋಡೆ ಕುಸಿತ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Share News

ಬೆಂಗಳೂರು: ನಗರದ ಶಿವಾಜಿನಗರದಲ್ಲಿ ಮಳೆಯ ಆರ್ಭಟಕ್ಕೆ ಕಾಂಪೌಂಡ್ ಗೋಡೆ ಕುಸಿದು ಸಂಭವಿಸಿದ ಭೀಕರ ದುರಂತದಲ್ಲಿ ಏಳು ಮಂದಿ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಧನವನ್ನು ಅವರು ಘೋಷಿಸಿದ್ದಾರೆ.

 

ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಸಂಜೆ ದುರಂತ ನಡೆದ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿದ ಮುಖ್ಯಮಂತ್ರಿಗಳು, ಕುಸಿದ ಗೋಡೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಸ್ಥಳದಲ್ಲಿ ಬಾಕಿಯಿರುವ ಅವಶೇಷಗಳನ್ನು ತೆರವುಗೊಳಿಸಲು ಮತ್ತು ತುರ್ತು ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

 

ನಂತರ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಾಗಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಘಟನೆಯಲ್ಲಿ ಗಾಯಗೊಂಡ ಎಲ್ಲರಿಗೂ ಸರ್ಕಾರದ ವತಿಯಿಂದಲೇ ಉಚಿತವಾಗಿ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು. “ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ,” ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

 

ಶಿವಾಜಿನಗರದಲ್ಲಿ ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ನೋವಿನ ವಿಚಾರ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ,” ಎಂದು ಮುಖ್ಯಮಂತ್ರಿಗಳು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

​ಮಳೆಯಿಂದ ಉಂಟಾಗಿರುವ ಹಾನಿ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ನಗರದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ.


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin