ರಾಮನಗರ: ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ನಿವಾಸಿ ಕಾಂತರಾಜು (53) ಮೃತಪಟ್ಟ ರೈತ. ಕಳೆದ ಏಪ್ರಿಲ್ 19ರಂದು ಗ್ರಾಮದ ಬಳಿ ಬೀಡುಬಿಟ್ಟಿದ್ದ ಕಾಡಾನೆಯನ್ನು ಮರಳಿ ಕಾಡಿಗಟ್ಟುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಹಮ್ಮಿಕೊಂಡಿತ್ತು. ಈ ಕಾರ್ಯಾಚರಣೆ ನೋಡಲು ಜನರು ಜಮಾಯಿಸಿದ್ದರು. ಈ ವೇಳೆ ಹಠಾತ್ತನೆ ರೈತರ ಮೇಲೆರಗಿದ ಕಾಡಾನೆ, ತನ್ನ ಜಮೀನಿನಲ್ಲಿದ್ದ ಕಾಂತರಾಜು ಅವರ ಮೇಲೆ ಭೀಕರವಾಗಿ ದಾಳಿ ನಡೆಸಿತ್ತು.
ಆನೆಯ ದಾಳಿಯಿಂದ ಕಾಂತರಾಜು ಅವರ ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯಗಳಾಗಿ ತೀವ್ರ ರಕ್ತಸ್ರಾವ ಉಂಟಾಗಿತ್ತು. ತಕ್ಷಣವೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಹಾಗೂ ಸುದೀರ್ಘ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಗಾಯಗಳು ಗಂಭೀರವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ನಿನ್ನೆ ಕೊನೆಯುಸಿರೆಳೆದಿದ್ದಾರೆ.
ರೈತನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮಂಗಾಡಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಶೋಕದ ಛಾಯೆ ಆವರಿಸಿದೆ. ಅರಣ್ಯ ಇಲಾಖೆ ಮತ್ತು ಸರ್ಕಾರದ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚನ್ನಪಟ್ಟಣ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ರೈತರು ಹೊಲ-ಗದ್ದೆಗಳಿಗೆ ಹೋಗಲು ಭಯಪಡುವಂತಾಗಿದೆ. ಕೂಡಲೇ ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕು ಮತ್ತು ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.