ಮಾಲೂರು: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೆ.ಜಿ ಹಳ್ಳಿ ಗ್ರಾಮದ ಬಳಿ ಯುವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಅತ್ಯಂತ ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಈ ಘಟನೆಯಿಂದ ಇಡೀ ತಾಲೂಕು ಬೆಚ್ಚಿಬಿದ್ದಿದ್ದು, ಕೊಲೆಗಡುಕರು ಸ್ಥಳದಿಂದ ಪರಾರಿಯಾಗಿದ್ದಾರೆ.
ಮಾಲೂರು ತಾಲೂಕಿನ ಜಂಗಾನಹಳ್ಳಿ ಗ್ರಾಮದ ನಿವಾಸಿ ಪುರುಷೋತ್ತಮ್ (26) ಕೊಲೆಯಾದ ದುರ್ದೈವಿ. ಟೇಕಲ್ ರೈಲ್ವೆ ನಿಲ್ದಾಣದ ಪಕ್ಕದಲ್ಲಿರುವ ಸಂತೇ ಮೈದಾನದ ಬಳಿ ಈ ಕೃತ್ಯ ನಡೆದಿದೆ. ಇಬ್ಬರು ಯುವಕರು ಪುರುಷೋತ್ತಮ್ನನ್ನು ಹಿಂಬಾಲಿಸಿ, ಅಡ್ಡಗಟ್ಟಿ ತಲೆಯ ಮೇಲೆ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಕೊಲೆ ಮಾಡಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಆತಂಕಗೊಂಡಿದ್ದರು. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಮಾಸ್ತಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಘಟನಾ ಸ್ಥಳದ ಮಹಜರು ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಗೆ ನಿಖರವಾದ ಕಾರಣವೇನು? ಹತ್ಯೆ ಮಾಡಿದವರು ಯಾರು? ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಹಳೇ ದ್ವೇಷ ಅಥವಾ ವೈಯಕ್ತಿಕ ಕಾರಣಗಳಿಗಾಗಿ ಈ ಕೃತ್ಯ ನಡೆದಿದೆಯೇ ಎಂಬ ದೃಷ್ಟಿಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಮಾಸ್ತಿ ಪೊಲೀಸರು, ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.