ಚಿಂತಾಮಣಿ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿಯೊಬ್ಬಳು ಬಲಿಯಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯ ವೈದ್ಯರ ಎಡವಟ್ಟಿನಿಂದಾಗಿ 24 ವರ್ಷದ ಯುವತಿ ಸಾವನ್ನಪ್ಪಿದ್ದು, ಕುಟುಂಬಸ್ಥರು ರಾತ್ರಿ ಇಡೀ ಶವವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಗ್ರಾಮದ ನಿವಾಸಿ ಓಬಳೇಶ್ ಎಂಬವರ ಪತ್ನಿ ನರ್ಮದಾ (24) ಮೃತ ದುರ್ದೈವಿ. ಎರಡು ತಿಂಗಳ ಹಿಂದಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದ ನರ್ಮದಾ ಅವರಿಗೆ, ಕುಟುಂಬ ನಿಯಂತ್ರಣ ಶಸ್ತ್ರಚಿಕಿತ್ಸೆ (ಆಪರೇಷನ್) ಮಾಡಿಸಿಕೊಳ್ಳಲು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ಮುಗಿದ ಬಳಿಕ ಎರಡು ದಿನಗಳ ಹಿಂದಷ್ಟೇ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.
ಮನೆಯಲ್ಲಿದ್ದ ನರ್ಮದಾ ಅವರಿಗೆ ಶನಿವಾರ ರಾತ್ರಿ ಆಪರೇಷನ್ ಮಾಡಿದ್ದ ಜಾಗದಲ್ಲಿ ವಿಪರೀತ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಚಿಂತಾಮಣಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನೋವಿನ ತೀವ್ರತೆಯಿಂದ ನರ್ಮದಾ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ವೈದ್ಯರು ಸರಿಯಾದ ಸಮಯದಲ್ಲಿ ಸ್ಪಂದಿಸದ ಕಾರಣ ಹಾಗೂ ಶಸ್ತ್ರಚಿಕಿತ್ಸೆಯಲ್ಲಿ ಮಾಡಿದ ತಪ್ಪುಗಳೇ ಸಾವಿಗೆ ಕಾರಣ ಎಂದು ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.
ವೈದ್ಯರ ನಿರ್ಲಕ್ಷ್ಯದ ವಿರುದ್ಧ ಆಕ್ರೋಶಗೊಂಡ ಮೃತಳ ಕುಟುಂಬಸ್ಥರು ಮತ್ತು ಗ್ರಾಮಸ್ಥರು, ರಾತ್ರಿ ಇಡೀ ಆಸ್ಪತ್ರೆಯ ಮುಂಭಾಗದಲ್ಲೇ ಶವವನ್ನಿಟ್ಟು ಪ್ರತಿಭಟನೆ ನಡೆಸಿದರು. ರಾತ್ರಿಯಿಡೀ ಪ್ರತಿಭಟನೆ ನಡೆದರೂ ಸಂಬಂಧಪಟ್ಟ ವೈದ್ಯರು ಅಥವಾ ಅಧಿಕಾರಿಗಳು ಇತ್ತ ತಲೆಹಾಕದೆ “ಕ್ಯಾರೆ” ಎನ್ನದಿರುವುದು ಪ್ರತಿಭಟನಾಕಾರರ ಆಕ್ರೋಶವನ್ನು ಇನ್ನಷ್ಟು ಹೆಚ್ಚಿಸಿತು.
ಬಾಣಂತಿ ನರ್ಮದಾ ಅವರ ಸಾವು ಇಬ್ಬರು ಹಸುಗೂಸುಗಳನ್ನು ತಬ್ಬಲಿ ಮಾಡಿದೆ. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರ ತವರು ಕ್ಷೇತ್ರದಲ್ಲೇ ಇಂತಹ ಘಟನೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.