ಹಾವೇರಿ: ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳ ಅವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದ ಕೊನೆಯ ಹಳ್ಳಿಯಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಗ್ರಾಮಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಸಂಚಾರ ದುಸ್ತರವಾಗಿದೆ.
ಎರಡು ಜಿಲ್ಲೆಗಳ ಪ್ರಮುಖ ಗ್ರಾಮಗಳನ್ನು ಸಂಪರ್ಕಿಸುವ ಈ ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ಎದುರಾಗಿದೆ.
ಇತ್ತೀಚೆಗೆ ಸುರಿಯುತ್ತಿರುವ ಮಳೆಗೆ ರಸ್ತೆಯ ಗುಂಡಿಗಳಲ್ಲಿ ನೀರು ತುಂಬಿ ಇಡೀ ಮಾರ್ಗ ಕೆಸರಿನ ಹೊಂಡವಾಗಿ ಮಾರ್ಪಟ್ಟಿದೆ. ಇದರಿಂದಾಗಿ ಬೈಕ್ ಸವಾರರು ನಿಯಂತ್ರಣ ತಪ್ಪಿ ಬಿದ್ದು ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿವೆ. ಈ ರಸ್ತೆಯನ್ನು ಪ್ರತಿದಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು, ಕೂಲಿ ಕಾರ್ಮಿಕರು ಹಾಗೂ ನೂರಾರು ಸಾರ್ವಜನಿಕರು ಆಶ್ರಯಿಸಿದ್ದಾರೆ. ರಸ್ತೆ ಹದಗೆಟ್ಟಿರುವುದರಿಂದ ತುರ್ತು ವೈದ್ಯಕೀಯ ಸೇವೆ ಒದಗಿಸುವ ಆಂಬ್ಯುಲೆನ್ಸ್ ಹಾಗೂ ಇತರೆ ವಾಹನಗಳ ಸಂಚಾರಕ್ಕೂ ಭಾರಿ ಅಡಚಣೆ ಉಂಟಾಗಿದೆ.
ರಸ್ತೆಯ ದುಸ್ಥಿತಿಯ ಕುರಿತು ಹಲವಾರು ಬಾರಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಚುನಾವಣೆ ಸಮಯದಲ್ಲಿ ಮತ ಕೇಳಲು ಬರುವ ರಾಜಕಾರಣಿಗಳು, ಗೆದ್ದ ಬಳಿಕ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಇಚ್ಚಂಗಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಸಂಬಂಧಪಟ್ಟ ಉನ್ನತಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನಹರಿಸಿ, ತಕ್ಷಣವೇ ರಸ್ತೆ ದುರಸ್ತಿ ಕಾರ್ಯ ಕೈಗೊಂಡು ಸಾರ್ವಜನಿಕರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.