Police Roundup

ದೊಡ್ಡಬಳ್ಳಾಪುರ ನಗರಸಭೆಯ ನೂತನ ಉಪಾಧ್ಯಕ್ಷರಾಗಿ ಬಿಜೆಪಿಯ ಬಂತಿ ವೆಂಕಟೇಶ್‌ ಅವಿರೋಧ ಆಯ್ಕೆ

Share News

ದೊಡ್ಡಬಳ್ಳಾಪುರ: ನಗರಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ಅವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಬಂತಿ ವೆಂಕಟೇಶ್ ಅವರು ನೂತನ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

​ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸದಸ್ಯರಾದ ಬಂತಿ ವೆಂಕಟೇಶ್ ಅವರು ಸಲ್ಲಿಕೆ ಮಾಡಿದ್ದ ನಾಮಪತ್ರವೊಂದೇ ಸಿಂಧುವಾಗಿದ್ದರಿಂದ, ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಟಿ.ಆರ್. ಮಂಜುನಾಥ್ ಅಧಿಕೃತವಾಗಿ ಪ್ರಕಟಿಸಿದರು.

 

ಬಂತಿ ವೆಂಕಟೇಶ್ ಅವರ ಆಯ್ಕೆಯ ಬಳಿಕ ಮಾತನಾಡಿದ ಶಾಸಕ ಧೀರಜ್ ಮುನಿರಾಜು ಅವರು, “ಎನ್.ಡಿ.ಎ ಮೈತ್ರಿಕೂಟದ ಒಪ್ಪಂದದಂತೆ ಮುಂದಿನ ದಿನಗಳಲ್ಲಿ ನಗರಸಭೆಯ ಅಧ್ಯಕ್ಷ ಸ್ಥಾನವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲಾಗುವುದು. ಪ್ರಸ್ತುತ ನಮ್ಮ ಪಕ್ಷದ ಸದಸ್ಯರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಮುಂಬರುವ ದಿನಗಳಲ್ಲಿ ನಗರದ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಮೂಲಭೂತ ಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕಿದೆ” ಎಂದರು.

 

ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಬಂತಿ ವೆಂಕಟೇಶ್, “ನಗರಸಭೆಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಲೋಕಸಭಾ ಸದಸ್ಯರಾದ ಡಾ. ಕೆ. ಸುಧಾಕರ್, ತಾಲೂಕಿನ ಶಾಸಕರಾದ ಧೀರಜ್ ಮುನಿರಾಜು ಹಾಗೂ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಹರೀಶ್ ಗೌಡ ಸೇರಿದಂತೆ ಮೈತ್ರಿಕೂಟದ ಎಲ್ಲಾ ನಾಯಕರ ಬೆಂಬಲ ಮತ್ತು ಸಹಕಾರದಿಂದ ಈ ಜವಾಬ್ದಾರಿ ಸಿಕ್ಕಿದೆ. ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ. ಸಿಕ್ಕಿರುವ ಅಲ್ಪಾವಧಿಯಲ್ಲೇ ನಗರದ ಮೂಲಭೂತ ಸೌಕರ್ಯಗಳ ಗುಣಮಟ್ಟವನ್ನು ಹೆಚ್ಚಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ” ಎಂದು ಭರವಸೆ ನೀಡಿದರು.

 

ನೂತನ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಂತಿ ವೆಂಕಟೇಶ್ ಅವರಿಗೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಮಾಜಿ ಉಪಾಧ್ಯಕ್ಷ ಮಲ್ಲೇಶ್, ಮಾಜಿ ನಗರಸಭಾಧ್ಯಕ್ಷ ತ.ನ. ಪ್ರಭುದೇವ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಹರೀಶ್ ಗೌಡ, ನಗರಸಭೆಯ ಎಲ್ಲಾ ಸದಸ್ಯರು ಹಾಗೂ ಬಿಜೆಪಿ-ಜೆಡಿಎಸ್ ಜಿಲ್ಲಾ ಮತ್ತು ತಾಲೂಕು ಘಟಕದ ಪ್ರಮುಖರು ಹೂಗುಚ್ಛ ನೀಡಿ ಶುಭ ಹಾರೈಸಿದರು.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin