Skip to main content

Police Roundup

ಕೋಲಾರ ಗ್ರಾಮಾಂತರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಅಂತರಜಿಲ್ಲಾ ಸರಗಳ್ಳರ ಬಂಧನ, ಒಡವೆ ವಶ!

Share News

ಕೋಲಾರ: ಮಧ್ಯರಾತ್ರಿ ದಾರಿ ಕೇಳುವ ನೆಪದಲ್ಲಿ ಸಾರ್ವಜನಿಕರ ಗಮನ ಹರಿಸಿ ಚಿನ್ನದ ಸರ ಕದ್ದು ಪರಾರಿಯಾಗುತ್ತಿದ್ದ ಬೆಂಗಳೂರು ಮೂಲದ ಇಬ್ಬರು ಖತರ್ನಾಕ್ ಬೈಕ್ ಕಳ್ಳರನ್ನು ಕೋಲಾರ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

​ಮೇ 16 ರಂದು ಕೋಲಾರದ ಗಾಂಧಿನಗರ ನಿವಾಸಿಯಾದ ಶಿವಶಂಕರ್ ಎಂಬುವರು ಶ್ಯಾನಬೋಗನಹಳ್ಳಿ ರಸ್ತೆಯಲ್ಲಿ ಜಮೀನಿನ ಕಡೆಗೆ ತೆರಳುತ್ತಿದ್ದರು. ಈ ವೇಳೆ ಇವರನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಇಬ್ಬರು ಅಪರಿಚಿತರು, ಶ್ಯಾನಬೋಗನಹಳ್ಳಿಗೆ ಹೋಗುವ ದಾರಿ ಯಾವುದು ಎಂದು ಕೇಳಿದ್ದಾರೆ. ಅವರಿಗೆ ದಾರಿ ಹೇಳಲು ಶಿವಶಂಕರ್ ಅವರು ತಮ್ಮ ಬೈಕ್ ನಿಲ್ಲಿಸುತ್ತಿದ್ದಂತೆ, ಕ್ಷಣಾರ್ಧದಲ್ಲಿ ಕಾರ್ಯಪ್ರವೃತ್ತರಾದ ಖದೀಮರು ಶಿವಶಂಕರ್ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಬೈಕ್‌ನಲ್ಲಿ ಅತಿ ವೇಗವಾಗಿ ಪರಾರಿಯಾಗಿದ್ದರು.

 

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಸರ ಕಳ್ಳತನವಾದ ಹಿನ್ನೆಲೆಯಲ್ಲಿ ಶಿವಶಂಕರ್ ಅವರು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಗ್ರಾಮಾಂತರ ಠಾಣೆಯ ಪೊಲೀಸರು, ತಾಂತ್ರಿಕ ಹಾಗೂ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ಬೆಂಗಳೂರು ಮೂಲದ ಹೇಮಂತ್ ಮತ್ತು ಆದರ್ಶ್ ಎಂಬ ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.

 

ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಬೈಕ್ ಹಾಗೂ ಕಳವು ಮಾಡಲಾಗಿದ್ದ 23 ಗ್ರಾಂ ತೂಕದ ಚಿನ್ನದ ಸರವನ್ನು ಪೊಲೀಸರು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕಳ್ಳತನ ಪ್ರಕರಣ ದಾಖಲಿಸಿಕೊಂಡಿರುವ ಕೋಲಾರ ಗ್ರಾಮಾಂತರ ಪೊಲೀಸರು, ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸದ್ಯ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಅಪರಾಧ ನಡೆದ ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿದ ಕೋಲಾರ ಪೊಲೀಸರ ಕಾರ್ಯಕ್ಷಮತೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin