ಹೊಸಕೋಟೆ: ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್ ಚಾಲಕನ ಬೇಜವಾಬ್ದಾರಿತನ ಮತ್ತು ಸಂಚಾರಿ ನಿಯಮಗಳ ಉಲ್ಲಂಘನೆಗೆ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಅತ್ಯಂತ ಕರುಳು ಹಿಂಡುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ಶುಕ್ರವಾರ (ಜೂನ್ 19) ನಡೆದಿದೆ. ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಈ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ದಂಪತಿ ಹಾಗೂ ಅವರ ಎರಡು ವರ್ಷದ ಕಂದಮ್ಮ ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದಾರೆ.
ದೇವನಹಳ್ಳಿ ತಾಲೂಕಿನ ತೆಲ್ಲಹಳ್ಳಿ ಗ್ರಾಮದ ನಿವಾಸಿಗಳಾದ ಅರುಣ್ (35), ಅವರ ಪತ್ನಿ ಅನುಷಾ (32) ಹಾಗೂ ಎರಡು ವರ್ಷದ ಹೆಣ್ಣು ಮಗು ಹರ್ನಾ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಅಪಘಾತದ ತೀವ್ರತೆಗೆ ದಂಪತಿಯ ಮತ್ತೊಂದು ಮಗು, 5 ವರ್ಷದ ಅನುಶಿಕಾಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮಗುವಿನ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಮೃತ ಅರುಣ್ ಅವರು ಶುಕ್ರವಾರ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬೈಕ್‌ನಲ್ಲಿ ದೇವನಹಳ್ಳಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಸೂಲಿಬೆಲೆಯಿಂದ ಹೊಸಕೋಟೆ ಕಡೆಗೆ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಚಾಲಕ, ಸಂಚಾರಿ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಏಕಾಏಕಿ ‘ರಾಂಗ್ ರೂಟ್’ನಲ್ಲಿ (ವಿರುದ್ಧ ದಿಕ್ಕಿನಲ್ಲಿ) ನುಗ್ಗಿದ್ದಾನೆ.
ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಬಂದ ಬಸ್, ಎದುರಿನಿಂದ ನಿಯಮಾನುಸಾರ ಬರುತ್ತಿದ್ದ ಅರುಣ್ ಅವರ ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ರಸ್ತೆಗೆ ಬಿದ್ದ ದಂಪತಿ ಹಾಗೂ ಮಗು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಸ್ಥಳಕ್ಕೆ ಸೂಲಿಬೆಲೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ಬಿಎಂಟಿಸಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಸಾರಿಗೆ ಬಸ್ ಚಾಲಕನ ಈ ಯಡವಟ್ಟಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.