ಬೆಂಗಳೂರು: ಪ್ರೀತಿಯನ್ನು ನಿರಾಕರಿಸಿದಳು ಹಾಗೂ ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಪ್ರಿಯಕರನೇ ಪ್ರೇಯಸಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮಹಾಲಕ್ಷ್ಮಿ ಲೇಔಟ್ನ ಪೈಪ್ಲೈನ್ ರಸ್ತೆಯಲ್ಲಿ ಈ ರಕ್ತಪಾತ ನಡೆದಿದ್ದು, ಕೊಲೆಯಾದ ದುರ್ದೈವಿಯನ್ನು 23 ವರ್ಷದ ಅಂಜಲಿ ಎಂದು ಗುರುತಿಸಲಾಗಿದೆ. ಆರೋಪಿ ರಾಜೀವ್ ಹಾಗೂ ಅಂಜಲಿ ಕಳೆದ ಮೂರು-ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ಆರೋಪಿ ರಾಜೀವ್ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದರಿಂದ ಅಂಜಲಿ ಕುಟುಂಬಸ್ಥರು ಇವರ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇತ್ತೀಚೆಗೆ ಕುಟುಂಬದವರ ಒತ್ತಾಯಕ್ಕೆ ಮಣಿದಿದ್ದ ಅಂಜಲಿ, ಕ್ರಿಮಿನಲ್ ಹಿನ್ನೆಲೆಯ ರಾಜೀವ್ನಿಂದ ದೂರವಿರಲು ಪ್ರಯತ್ನಿಸುತ್ತಿದ್ದಳು ಎಂದು ತಿಳಿದುಬಂದಿದೆ.
ಭಾನುವಾರ ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಷಯ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಇದರಿಂದ ರೊಚ್ಚಿಗೆದ್ದ ಆರೋಪಿ, ಪೈಪ್ಲೈನ್ ರಸ್ತೆಯಲ್ಲಿ ಅಂಜಲಿಯ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಮನಸೋಇಚ್ಛೆ ಇರಿದು ಹಲ್ಲೆ ನಡೆಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದ ಯುವತಿಯನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಕಾರ್ಯಾಚರಣೆ ನಡೆಸಿದ ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಆರೋಪಿ ರಾಜೀವ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.