ದೊಡ್ಡಬಳ್ಳಾಪುರ: ತಾಲೂಕಿನ ಚೈತನ್ಯ ನಗರದ ದತ್ತಾತ್ರೇಯ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಲೇಔಟ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ವಿದ್ಯುತ್ ಅವಘಡಕ್ಕೆ ದಿನಸಿ ಅಂಗಡಿ ಮಾಲೀಕರೊಬ್ಬರು ಬಲಿಯಾಗಿದ್ದಾರೆ.
ದೊಡ್ಡಬಳ್ಳಾಪುರದ ದೇವರಾಜನಗರ ನಿವಾಸಿ, ಅರಳುಮಲ್ಲಿಗೆ ಬಾಗಿಲು ಬಳಿ ದಿನಸಿ ಅಂಗಡಿ ನಡೆಸುತ್ತಿದ್ದ ಸತೀಶ್ (35) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ಅರಳುಮಲ್ಲಿಗೆ ಬಾಗಿಲು ಪ್ರೌಢಶಾಲೆ ಸಮೀಪ ನಿರ್ಮಾಣವಾಗುತ್ತಿರುವ ಹೊಸ ಲೇಔಟ್‌ಗೆ ಗುರುವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ಸತೀಶ್ ಅವರು ತೆರಳಿದ್ದರು. ಈ ಸಂದರ್ಭದಲ್ಲಿ ಅಲ್ಲಿ ಅಕಸ್ಮಾತ್ ಆಗಿ ಹರಿದಾಡುತ್ತಿದ್ದ ವಿದ್ಯುತ್ ತಂತಿ ಸ್ಪರ್ಶಗೊಂಡು ತೀವ್ರವಾಗಿ ಗಾಯಗೊಂಡಿದ್ದಾರೆ.
ಘಟನೆಯನ್ನು ಗಮನಿಸಿದ ತಕ್ಷಣ ಸ್ಥಳೀಯರು ಗಂಭೀರ ಸ್ಥಿತಿಯಲ್ಲಿದ್ದ ಸತೀಶ್ ಅವರನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಪರಿಸ್ಥಿತಿ ಕೈಮೀರಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸತೀಶ್ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಘಟನೆಯಿಂದ ಮೃತರ ಕುಟುಂಬಸ್ಥರ ಹಾಗೂ ದೇವರಾಜನಗರದ ನಿವಾಸಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.