ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ಹಾಗೂ ನಾಗಮಂಗಲ ಉಪವಿಭಾಗಗಳ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಒಳಪಡುವ ರೌಡಿ ಶೀಟರ್ಗಳ ವಿಶೇಷ ಪರೇಡ್ ಶುಕ್ರವಾರ ನಡೆಯಿತು. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಈ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
ಪರೇಡ್ನಲ್ಲಿ ಭಾಗವಹಿಸಿದ್ದ ಡಿವೈಎಸ್ಪಿ, ಸಿಪಿಐ/ಪಿಐ ಹಾಗೂ ಪಿಎಸ್ಐ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟುಮಾಡುವ ಯಾವುದೇ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಾರದು ಎಂದು ರೌಡಿ ಶೀಟರ್ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಠಿಣ ಕ್ರಮದ ಎಚ್ಚರಿಕೆ: ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗುವುದು, ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವುದು ಅಥವಾ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.
ಮುಖ್ಯವಾಹಿನಿಗೆ ಬರಲು ಸಲಹೆ: ಅಪರಾಧ ಪ್ರವೃತ್ತಿಯನ್ನು ಸಂಪೂರ್ಣವಾಗಿ ತೊರೆದು, ಸಮಾಜದ ಮುಖ್ಯವಾಹಿನಿಗೆ ಮರಳಬೇಕು ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ಶಾಂತಿಯುತ ಜೀವನ ನಡೆಸಬೇಕು ಎಂದು ರೌಡಿ ಶೀಟರ್ಗಳಿಗೆ ಬುದ್ಧಿವಾದ ಹೇಳಲಾಯಿತು.
“ಸಾರ್ವಜನಿಕರ ಸುರಕ್ಷತೆ ಮತ್ತು ಶಾಂತಿ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಇಲಾಖೆ ಕಠಿಣ ನಿಲುವು ತಳೆಯಲಿದೆ.”
