ಶಿಡ್ಲಘಟ್ಟ: ನಗರ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ವಾಹನ ಸವಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತು ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕುವ ಉದ್ದೇಶದಿಂದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವುದರಿಂದ ಗಂಭೀರ ಅಪಘಾತಗಳು ಸಂಭವಿಸುವ ಅಪಾಯವಿರುವ ಹಿನ್ನೆಲೆಯಲ್ಲಿ, ದ್ವಿಚಕ್ರ ವಾಹನ ಚಾಲನೆ ವೇಳೆ ಮೊಬೈಲ್ ಬಳಸುತ್ತಿದ್ದ ಸವಾರರನ್ನು ಗುರುತಿಸಿ ಸ್ಥಳದಲ್ಲೇ ದಂಡ ವಿಧಿಸಲಾಗಿದೆ.
ಅಪಘಾತಗಳನ್ನು ತಡೆಯಲು ಮತ್ತು ಸಾರ್ವಜನಿಕರಲ್ಲಿ ಸುರಕ್ಷತಾ ಪ್ರಜ್ಞೆ ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಚಾಲನಾ ವೇಳೆಯಲ್ಲಿ ಮೊಬೈಲ್ ಫೋನ್ ಬಳಸಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
