ಯಾದಗಿರಿ,: ಜಿಲ್ಲೆಯ ಯಾದಗಿರಿ ತಾಲ್ಲೂಕಿನ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸಿಲ್ ಲ್ಯಾಬೋರೇಟರಿ (Seal Laboratory) ಕಂಪನಿಯಲ್ಲಿ ವಿಷಕಾರಿ ಕೆಮಿಕಲ್ ಸೋರಿಕೆಯಾಗಿ, ತೀವ್ರ ಉಸಿರಾಟದ ತೊಂದರೆಯಿಂದ ಕಾರ್ಮಿಕರು ಮೃತಪಟ್ಟಿರುವ ದುರಂತ ಸಂಭವಿಸಿದೆ.
ಕಂಪನಿಯ ಪ್ರೊಡಕ್ಷನ್ ಘಟಕದಲ್ಲಿ ರಾಸಾಯನಿಕ ವಸ್ತುಗಳ ಉತ್ಪಾದನೆ ನಡೆಯುತ್ತಿದ್ದ ವೇಳೆ ಏಕಾಏಕಿ ಕೆಮಿಕಲ್ ಸೋರಿಕೆಯಾಗಿದೆ. ನೋಡನೋಡುತ್ತಿದ್ದಂತೆಯೇ ಘಟಕದಾದ್ಯಂತ ವಿಷಾನಿಲ ಆವರಿಸಿಕೊಂಡಿದ್ದು, ಕಾರ್ಯನಿರತರಾಗಿದ್ದ ಕಾರ್ಮಿಕರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸಹೋದ್ಯೋಗಿಗಳು ಅಸ್ವಸ್ಥರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರಾದರೂ, ಚಿಕಿತ್ಸೆ ಫಲಿಸದೆ ಕೆಲ ಕಾರ್ಮಿಕರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಹಲವು ಕಾರ್ಮಿಕರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಡಳಿತ, ಜಿಪಂ ಹಾಗೂ ಪೊಲೀಸ್ ಉನ್ನತಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಮಿಕಲ್ ಸೋರಿಕೆಗೆ ನಿಖರ ಕಾರಣವೇನು ಹಾಗೂ ಸುರಕ್ಷತಾ ಲೋಪಗಳಿವೆಯೇ ಎಂಬ ಬಗ್ಗೆ ತನಿಖೆ ಆರಂಭಿಸಲಾಗಿದೆ.
ಕೈಗಾರಿಕಾ ಪ್ರದೇಶದಲ್ಲಿ ಸುರಕ್ಷತಾ ನಿಯಮಗಳ ಉಲ್ಲಂಘನೆಯೇ ಈ ದುರಂತಕ್ಕೆ ಕಾರಣವೆಂದು ಸಾರ್ವಜನಿಕರು ಹಾಗೂ ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ನಷ್ಟಪರಿಹಾರ ಒದಗಿಸಬೇಕು, ಗಾಯಾಳುಗಳ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಕಂಪನಿಯೇ ಭರಿಸಬೇಕು ಮತ್ತು ನಿರ್ಲಕ್ಷ್ಯ ವಹಿಸಿದ ಆಡಳಿತ ಮಂಡಳಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ತೀವ್ರವಾಗಿ ಒತ್ತಾಯಿಸಲಾಗಿದೆ.
