ಆನೇಕಲ್: ಆನೇಕಲ್ ತಾಲೂಕಿನ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹಾಗಡೆ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಮವಸ್ತ್ರ, ಶಾಲಾ ಬ್ಯಾಗ್ ಹಾಗೂ ಅಗತ್ಯ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಹಾಗೂ ಶೈಕ್ಷಣಿಕ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ದಾನಿಗಳ ಪ್ರೋತ್ಸಾಹ
ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ತಿಲಕ್ ಕುಮಾರ್ ಗೌಡ ಹಾಗೂ ಗುತ್ತಿಗೆದಾರ ಆನಂದ್ ಅವರ ನೇತೃತ್ವದಲ್ಲಿ ಈ ಸಮಾಜಮುಖಿ ಕಾರ್ಯ ನಡೆದಿದೆ.
”ಖಾಸಗಿ ಶಾಲೆಗಳಿಗೆ ಸವಾಲಾಗಿ ಸರ್ಕಾರಿ ಶಾಲೆಯ ಮಕ್ಕಳೂ ಗುಣಮಟ್ಟದ ಶಿಕ್ಷಣ ಪಡೆಯಬೇಕು. ಗ್ರಾಮೀಣ ಭಾಗದ ಶಾಲೆಗಳನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದ್ದು, ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ಈ ನೆರವು ನೀಡಲಾಗಿದೆ” ಎಂದು ಅವರು ತಿಳಿಸಿದರು.
ಗ್ರಾಮಸ್ಥರ ಶ್ಲಾಘನೆ
ದಾನಿಗಳ ಈ ಸಾಮಾಜಿಕ ಕಾಳಜಿಗೆ ಗ್ರಾಮಸ್ಥರು, ಪೋಷಕರು ಹಾಗೂ ಶಿಕ್ಷಕ ವೃಂದ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಕೇಬಲ್ ಬಾಬು, ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕ ವೃಂದ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.