ತುಮಕೂರು: ಜಿಲ್ಲೆಯಾದ್ಯಂತ ಇಂದು ಒಟ್ಟು 26 ಪರೀಕ್ಷಾ ಕೇಂದ್ರಗಳಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (APC) ನೇಮಕಾತಿ ಪರೀಕ್ಷೆ-2026 ಅತ್ಯಂತ ಪಾರದರ್ಶಕವಾಗಿ ಹಾಗೂ ಶಾಂತಿಯುತವಾಗಿ ನಡೆಯಿತು.
ಕಟ್ಟುನಿಟ್ಟಿನ ತಪಾಸಣೆ ಹಾಗೂ ಭದ್ರತೆ:
ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ನಕಲಿ ಚಟುವಟಿಕೆಗಳು ನಡೆಯದಂತೆ ತಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮಾರ್ಗಸೂಚಿಯಂತೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿತ್ತು. ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ಶ್ರೀ ಅಶೋಕ್ ವೆಂಕಟ್, ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರ (Addl SP) ನೇರ ಉಸ್ತುವಾರಿಯಲ್ಲಿ ಅಭ್ಯರ್ಥಿಗಳನ್ನು ಕೂಲಂಕುಷವಾಗಿ ತಪಾಸಣೆಗೆ (Frisking) ಒಳಪಡಿಸಿದ ನಂತರವೇ ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಅನುಮತಿ ನೀಡಲಾಯಿತು.
ಬಿಗಿ ಪೊಲೀಸ್ ಬಂದೋಬಸ್ತ್:
ಎಲ್ಲಾ 26 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿಯೂ ಸೂಕ್ತ ಭದ್ರತೆಯನ್ನು ವಹಿಸಲಾಗಿತ್ತು ಎಂದು ಜಿಲ್ಲಾ ಪೊಲೀಸ್ ಕಚೇರಿಯ ಮಾಧ್ಯಮ ಸಂವಹನ ವಿಭಾಗ ತಿಳಿಸಿದೆ.
