ಚಿಂತಾಮಣಿ: ಪ್ರಸಿದ್ಧ ಯಾತ್ರಾ ಹಾಗೂ ಪ್ರವಾಸಿ ತಾಣಗಳಾದ ಕೈವಾರ ಮತ್ತು ಕೈಲಾಸಗಿರಿಗೆ ಭೇಟಿ ನೀಡಿ ಬೆಂಗಳೂರಿಗೆ ಹಿಂತಿರುಗುತ್ತಿದ್ದ ಯುವಕನೊಬ್ಬ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರಿನ ಜಾಲಹಳ್ಳಿ ನಿವಾಸಿ, ಹೆಚ್.ಐ.ಹೆಚ್.ಆರ್. (HIHR) ಕಂಪನಿಯ ಉದ್ಯೋಗಿ ಸಾಯಿ ಕುಮಾರ್ (23) ಮೃತ ದುರ್ದೈವಿ.
ಘಟನೆಯ ವಿವರ:
ಸಾಯಿ ಕುಮಾರ್ ಅವರು ತಮ್ಮ ಸ್ನೇಹಿತರ ತಂಡದೊಂದಿಗೆ ಪ್ರತ್ಯೇಕ ದ್ವಿಚಕ್ರ ವಾಹನಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಪ್ರಸಿದ್ಧ ಕ್ಷೇತ್ರಗಳಾದ ಕೈವಾರ ಹಾಗೂ ಕೈಲಾಸಗಿರಿ ಸೇರಿದಂತೆ ವಿವಿಧ ಸ್ಥಳಗಳಿಗೆ ಪ್ರವಾಸ ಬಂದಿದ್ದರು. ಭಾನುವಾರ ದಿನಪೂರ್ತಿ ಪ್ರವಾಸಿ ತಾಣಗಳನ್ನು ವೀಕ್ಷಿಸಿದ ಬಳಿಕ, ರಾತ್ರಿ ಸ್ನೇಹಿತರೆಲ್ಲರೂ ಬೈಕ್‌ಗಳಲ್ಲಿ ಬೆಂಗಳೂರಿಗೆ ವಾಪಸ್ ಹೊರಟಿದ್ದರು.
ಬೆಂಗಳೂರು ರಾಜ್ಯ ಹೆದ್ದಾರಿಯ ಸಂತೇಕಲ್ಲಹಳ್ಳಿ ಮತ್ತು ವೈಜಕೂರು ನಡುವಿನ ರಸ್ತೆಯಲ್ಲಿ ಚಲಿಸುತ್ತಿದ್ದಾಗ, ಎದುರುಗಡೆಯಿಂದ ಬಂದ ಬೊಲೆರೋ ವಾಹನವೊಂದು ಸಾಯಿ ಕುಮಾರ್ ಅವರ ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಪೊಲೀಸ್ ಭೇಟಿ, ಪ್ರಕರಣ ದಾಖಲು:
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಚಿಂತಾಮಣಿ ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಶಿವರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ ಕುರಿತು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.