ಆನೇಕಲ್: ತಾಲ್ಲೂಕಿನ ವಿವಿಧೆಡೆ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ಅಗ್ನಿ ಅವಘಡಗಳಲ್ಲಿ ಎರಡು ಗುಜರಿ ಗೋದಾಮುಗಳು ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಯಲ್ಲಿ ಕರಕಲಾಗಿವೆ.
ಆನೇಕಲ್ ಸಮೀಪದ ಗೌರೇನಹಳ್ಳಿ ಬಳಿಯ ಕಕ್ಕಮಲ್ಲೇಶ್ವರ ಬೆಟ್ಟ-ಸಿದ್ದನಪಾಳ್ಯ ರಸ್ತೆಯಲ್ಲಿರುವ ಬಾಬು ಎಂಬುವರಿಗೆ ಸೇರಿದ ಗುಜರಿ ಗೋದಾಮಿನಲ್ಲಿ ಬುಧವಾರ ಮಧ್ಯಾಹ್ನ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಗೋದಾಮಿನಲ್ಲಿ ಪ್ಲಾಸ್ಟಿಕ್ ಸೇರಿದಂತೆ ದಹನಕಾರಿ ವಸ್ತುಗಳು ಹೆಚ್ಚಾಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲೇ ಗೋದಾಮಿನಾದ್ಯಂತ ವ್ಯಾಪಿಸಿತು. ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಆಕಾಶಕ್ಕೆ ಚಿಮ್ಮಿದ್ದು, ಸುತ್ತಮುತ್ತಲ ನಿವಾಸಿಗಳಲ್ಲಿ ಆತಂಕ ಮೂಡಿಸಿತ್ತು.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಬೆಂಕಿಯ ರಭಸಕ್ಕೆ ಗೋದಾಮಿನಲ್ಲಿದ್ದ ಬಹುತೇಕ ವಸ್ತುಗಳು ಸುಟ್ಟು ಬೂದಿಯಾಗಿವೆ.
ಇದೇ ವೇಳೆ ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ವ್ಯಾಪ್ತಿಯ ಆರ್.ಕೆ.ಟೌನ್‌ಶಿಪ್‌ನಲ್ಲಿರುವ ಮತ್ತೊಂದು ಗುಜರಿ ಅಂಗಡಿಯಲ್ಲೂ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಈ ಎರಡೂ ಪ್ರಕರಣಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಅಥವಾ ಬೇರೆ ಯಾವುದಾದರೂ ಕಾರಣದಿಂದ ಅವಘಡ ಸಂಭವಿಸಿದೆಯೇ ಎಂಬ ಬಗ್ಗೆ ಪೊಲೀಸರು ಹಾಗೂ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ.