ಭದ್ರಾವತಿ: ಕುಟುಂಬಕ್ಕೆ ಅಪಾಯವಿದೆ ಎಂದು ವಾಮಾಚಾರದ ಭಯ ಹುಟ್ಟಿಸಿ ಪೂಜೆಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ್ದ ಖದೀಮನನ್ನು ಹೊಸಮನೆ ಠಾಣೆ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಮುರಳಿ ಎಂದು ಗುರುತಿಸಲಾಗಿದೆ.
ಪ್ರಕರಣದ ಹಿನ್ನೆಲೆ:
ಭದ್ರಾವತಿಯ ಕೆಎಸ್ಆರ್ಟಿಸಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಯೊಬ್ಬರನ್ನು ಸಂಪರ್ಕಿಸಿದ್ದ ಆರೋಪಿಗಳು, ನಿಮ್ಮ ಕುಟುಂಬಕ್ಕೆ ವಾಮಾಚಾರದ ಭೀತಿಯಿದ್ದು ದೊಡ್ಡ ಅಪಾಯ ಕಾದಿದೆ ಎಂದು ನಂಬಿಸಿದ್ದರು. ಕುಟುಂಬದ ರಕ್ಷಣೆಗಾಗಿ ವಿಶೇಷ ಪೂಜೆ ನಡೆಸಬೇಕೆಂದು ಹೇಳಿ ಮಹಿಳೆಯಿಂದ 193 ಗ್ರಾಂ ತೂಕದ ಚಿನ್ನಾಭರಣ ಹಾಗೂ ₹2 ಲಕ್ಷ ನಗದನ್ನು ಪಡೆದುಕೊಂಡು ಪರಾರಿಯಾಗಿದ್ದರು.
ಚಾಣಾಕ್ಷ ಕಾರ್ಯಾಚರಣೆ – ಆರೋಪಿ ಬಂಧನ:
ವಂಚನೆಗೊಳಗಾದದ್ದು ಅರಿವಿಗೆ ಬರುತ್ತಿದ್ದಂತೆ ಸಂತ್ರಸ್ತೆ ಹೊಸಮನೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಕೆಲವೇ ಗಂಟೆಗಳಲ್ಲಿ ಪ್ರಮುಖ ಆರೋಪಿ ಮುರಳಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನಿಂದ ₹22.50 ಲಕ್ಷ ಮೌಲ್ಯದ 161 ಗ್ರಾಂ ಚಿನ್ನದ ಆಭರಣಗಳು ಹಾಗೂ ಗಿರವಿ ಅಂಗಡಿಯಲ್ಲಿದ್ದ ಮತ್ತು ಕರಗಿಸಿ ಬಚ್ಚಿಡಲಾಗಿದ್ದ ಚಿನ್ನದ ಗಟ್ಟಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಪೊಲೀಸ್ ತಂಡಕ್ಕೆ ಶ್ಲಾಘನೆ:
ಭದ್ರಾವತಿ ಡಿವೈಎಸ್ಪಿ ಪ್ರಕಾಶ್ ರಾಥೋಡ್ ಅವರ ಮಾರ್ಗದರ್ಶನದಲ್ಲಿ, ಹೊಸಮನೆ ಠಾಣೆಯ ಪಿಎಸ್ಐ ಸಿದ್ದಪ್ಪ ಎಂ.ಪಿ. ಅವರ ನೇತೃತ್ವದ ವಿಶೇಷ ಪೊಲೀಸ್ ತಂಡವು ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಕೇವಲ ಕೆಲವೇ ಗಂಟೆಗಳಲ್ಲಿ ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸಿದ ಪೊಲೀಸ್ ತಂಡದ ಕ್ಷಿಪ್ರ ಕಾರ್ಯಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.