ಬೀದರ್: ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಕುಂದು-ಕೊರತೆಗಳ ಕುರಿತು ಪ್ರಮುಖ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಐ.ಪಿ.ಎಸ್. ಅವರು, ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆ ಹಾಗೂ ಕುಂದು-ಕೊರತೆಗಳನ್ನು ಆಲಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ನೀಡಿದ ದೂರುಗಳು, ಮಾಹಿತಿ ಮತ್ತು ಅಮೂಲ್ಯ ಸಲಹೆಗಳನ್ನು ಅತ್ಯಂತ ಸಕಾರಾತ್ಮಕವಾಗಿ ಸ್ವೀಕರಿಸಲಾಯಿತು.
ಅಲ್ಲದೆ, ಸಾರ್ವಜನಿಕರು ಸಲ್ಲಿಸಿದ ದೂರು ಹಾಗೂ ಸಲಹೆಗಳ ಮೇಲ್ವಿಚಾರಣೆ ನಡೆಸಿ, ಮುಂಬರುವ ದಿನಗಳಲ್ಲಿ ಇವುಗಳ ಪರಿಹಾರಕ್ಕಾಗಿ ಪೊಲೀಸ್ ಇಲಾಖೆಯಿಂದ ತಕ್ಷಣದ ಕಾರ್ಯಪ್ರವೃತ್ತರಾಗುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಪ್ರಮುಖ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮುಖಂಡರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಉಪಸ್ಥಿತರಿದ್ದರು.