ಮೈಸೂರು: ಫಾರ್ಮ್–7 ಅರ್ಜಿಗಳನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಬೂತ್ ಮಟ್ಟದ ಏಜೆಂಟ್‌ಗಳು (BLA) ಹಾಗೂ ಕಾರ್ಯಕರ್ತರ ವಿರುದ್ಧ ಮೈಸೂರಿನ ನರಸಿಂಹರಾಜ (ಎನ್.ಆರ್.) ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯವು ಮಹತ್ವದ ಮಧ್ಯಂತರ ರಕ್ಷಣೆ ನೀಡಿದೆ.
ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಕ್ರಿಮಿನಲ್ ಪಿಟಿಷನ್ ಸಂಖ್ಯೆ 15507/2026ರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ್ ರಾಮನಾಥ ಹೆಗ್ಡೆ ಅವರ ಏಕಸದಸ್ಯ ನ್ಯಾಯಪೀಠವು, ಎನ್.ಆರ್. ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 220/2026ರ ಮುಂದಿನ ತನಿಖೆಗೆ ಮುಂದಿನ ಆದೇಶದವರೆಗೆ ತಡೆಯಾಜ್ಞೆ ನೀಡಿ ಆದೇಶಿಸಿದೆ.
ವಿಚಾರಣೆಯ ವೇಳೆ ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಎಂ. ಹಾಗೂ ವಕೀಲರಾದ ಅಯ್ಯಪ್ಪ ಕೆ.ಜಿ. ಮತ್ತು ಡಾ. ಸತ್ಯ ಚೆಟ್ಟಿ ಅವರು ವಾದ ಮಂಡಿಸಿದರು. ಈ ಆದೇಶದಿಂದಾಗಿ ಪ್ರಕರಣ ಎದುರಿಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಬೂತ್ ಮಟ್ಟದ ಏಜೆಂಟ್‌ಗಳಿಗೆ ತಾತ್ಕಾಲಿಕ ನಿರಾಳತೆ ಸಿಕ್ಕಂತಾಗಿದೆ.