ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿದ್ದ ನಾಮಫಲಕಕ್ಕೆ ಕಿಡಿಗೇಡಿಗಳು ಸಗಣಿ ಎರಚಿ ವಿಕೃತವಾಗಿ ಅಪಮಾನ ಮಾಡಿರುವ ಘಟನೆ ಸಂಭವಿಸಿದೆ. ಈ ಹೀನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆಯೇ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ದಲಿತ ಮುಖಂಡರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮಾಜದಲ್ಲಿ ಕೋಮು ಸೌಹಾರ್ದತೆ ಕೆಡಿಸಿ, ಶಾಂತಿ ಭಂಗ ತರಲು ಯತ್ನಿಸಿರುವ ಈ ಕಿಡಿಗೇಡಿಗಳನ್ನು ವಿಳಂಬ ಮಾಡದೆ ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಜಂಟಿಯಾಗಿ ಒತ್ತಾಯಿಸಿದ್ದಾರೆ.
ಇತ್ತೀಚೆಗಷ್ಟೇ ಜಿಲ್ಲೆಯ ಮಸಣಾಪುರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಲಾದ ಘಟನೆ ನಡೆದಿತ್ತು. ಈ ಪ್ರಕರಣದ ಬಿಸಿ ಇನ್ನೂ ಮಾಸುವ ಮುನ್ನವೇ, ಈಗ ಹೊಂಗನೂರು ಗ್ರಾಮದಲ್ಲೂ ಸಹ ಅದೇ ಮಾದರಿಯ ಕೃತ್ಯ ಮರುಕಳಿಸಿರುವುದು ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಹಾಗೂ ಅಸಮಾಧಾನವನ್ನು ಮೂಡಿಸಿದೆ. ಪ್ರಗತಿಪರ ಚಿಂತಕರು ಹಾಗೂ ಸಂಘಟನೆಗಳು ಈ ಪ್ರವೃತ್ತಿಯನ್ನು ತೀವ್ರವಾಗಿ ಖಂಡಿಸಿವೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಹೊಂಗನೂರು ಗ್ರಾಮಸ್ಥರು ಹಾಗೂ ವಿವಿಧ ಪ್ರಗತಿಪರ ಸಂಘಟನೆಯ ಕಾರ್ಯಕರ್ತರು ನಾಮಫಲಕದ ಮುಂಭಾಗದಲ್ಲೇ ಧರಣಿ ನಡೆಸಿ ಪ್ರತಿಭಟಿಸಿದರು. ಮಹಾಪುರುಷರ ಭಾವಚಿತ್ರಕ್ಕೆ ಹಾನಿ ಮಾಡುವ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ದೇಶದ್ರೋಹಿ ಮನಸ್ಥಿತಿಯವರನ್ನು ಪತ್ತೆ ಹಚ್ಚಲು ಪೊಲೀಸರು ವಿಶೇಷ ತಂಡ ರಚಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಚಾಮರಾಜನಗರ ಠಾಣೆಯ ಉನ್ನತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಶಾಂತಗೊಳಿಸಿದ ಪೊಲೀಸರು, ತಪ್ಪಿತಸ್ಥರನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಸದ್ಯಕ್ಕೆ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.