ದೊಡ್ಡಬಳ್ಳಾಪುರ: “ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ಮತ್ತು ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್‌ಐಸಿ (ESIC) ಆಸ್ಪತ್ರೆಗಳು ವರದಾನವಾಗಲಿವೆ,” ಎಂದು ಕೇಂದ್ರ ಕಾರ್ಮಿಕ, ಉದ್ಯೋಗ ಹಾಗೂ ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವೀಯ ಅವರು ಹೇಳಿದರು.
ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸುಮಾರು ₹101 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 100 ಹಾಸಿಗೆಗಳ ಸಾಮರ್ಥ್ಯದ ಇಎಸ್‌ಐಸಿ ಆಸ್ಪತ್ರೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, “ಕಾರ್ಮಿಕರ ಘನತೆ ಮತ್ತು ಸಾಮಾಜಿಕ ಭದ್ರತೆಗೆ ಕೇಂದ್ರ ಸರ್ಕಾರ ಅಚಲ ಬದ್ಧತೆ ಹೊಂದಿದೆ. ದೇಶಾದ್ಯಂತ 20 ಇಎಸ್‌ಐಸಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿ ಕಾರ್ಮಿಕರ ಮಕ್ಕಳಿಗಾಗಿ ವಿಶೇಷ ಮೀಸಲಾತಿ ಕಲ್ಪಿಸಲಾಗಿದೆ. ಅಲ್ಲದೆ, 40 ವರ್ಷ ದಾಟಿದ ಪ್ರತಿಯೊಬ್ಬ ಕಾರ್ಮಿಕನಿಗೂ ವಾರ್ಷಿಕ ಉಚಿತ ಆರೋಗ್ಯ ತಪಾಸಣೆಯನ್ನು ಕಡ್ಡಾಯಗೊಳಿಸುವ ಮೂಲಕ ರೋಗಗಳನ್ನು ಪ್ರಾಥಮಿಕ ಹಂತದಲ್ಲೇ ಪತ್ತೆ ಹಚ್ಚಲು ಒತ್ತು ನೀಡಲಾಗಿದೆ,” ಎಂದರು. ಇದೇ ವೇಳೆ ಬಳ್ಳಾರಿಯಲ್ಲಿ ₹150 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮತ್ತೊಂದು ಇಎಸ್‌ಐಸಿ ಆಸ್ಪತ್ರೆಗೆ ಅವರು ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, “ದೊಡ್ಡಬಳ್ಳಾಪುರ ಭಾಗದಲ್ಲಿ ಕಾರ್ಮಿಕರ ಸಂಖ್ಯೆ ಹೆಚ್ಚಿದ್ದು, ಈ ಹಿಂದೆ ಚಿಕಿತ್ಸೆಗಾಗಿ ಬೆಂಗಳೂರಿನ ರಾಜಾಜಿನಗರಕ್ಕೆ ಅಲೆಯಬೇಕಿತ್ತು. ಇನ್ಮುಂದೆ ಇಲ್ಲಿಯೇ ತಜ್ಞ ವೈದ್ಯರ ಸೇವೆ ಲಭ್ಯವಾಗಲಿದೆ. ಪ್ರಸ್ತುತ 9 ಜನ ತಜ್ಞ ವೈದ್ಯರು ಹಾಗೂ ನರ್ಸಿಂಗ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದ್ದು, ಆಸ್ಪತ್ರೆ ಸುಸಜ್ಜಿತವಾಗಿ ಕಾರ್ಯನಿರ್ವಹಿಸಲಿದೆ,” ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಮಾತನಾಡಿ, “ಐದು ಎಕರೆ ಪ್ರದೇಶದಲ್ಲಿ ತಲೆ ಎತ್ತಿರುವ ಈ ಆಸ್ಪತ್ರೆಯಿಂದ ಬೆಂಗಳೂರು ಗ್ರಾಮಾಂತರ ಮಾತ್ರವಲ್ಲದೆ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಸುಮಾರು 5 ಲಕ್ಷ ಕಾರ್ಮಿಕರಿಗೆ ಅನುಕೂಲವಾಗಲಿದೆ,” ಎಂದರು. ಸ್ಥಳೀಯ ಶಾಸಕ ಧೀರಜ್ ಮುನಿರಾಜು ಅವರು ಮಾತನಾಡಿ, ವಲಸೆ ಕಾರ್ಮಿಕರಿಗೆ ಈ ಆಸ್ಪತ್ರೆ ಆಸರೆಯಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಇಎಸ್‌ಐಸಿ ಯೋಜನೆಯಡಿ ವಿವಿಧ ಫಲಾನುಭವಿಗಳಿಗೆ ಮಾತೃತ್ವ ಭತ್ಯೆ, ಅವಲಂಬಿತ ಭತ್ಯೆ ಹಾಗೂ ಅಂಗವೈಕಲ್ಯ ಭತ್ಯೆಯ ಚೆಕ್‌ಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ವೈದ್ಯಕೀಯ ಆಯುಕ್ತ ಡಾ. ಆರ್. ಶ್ರೀನಿವಾಸ್, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ ಕುಮಾರ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.