ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಗ್ಯಾರಂಟಿಗಳ ದುರ್ಬಳಕೆ ಹಾಗೂ ಹಣ ಸೋರಿಕೆಯನ್ನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸುವ ನಿಟ್ಟಿನಲ್ಲಿ ಎರಡೂ ಯೋಜನೆಗಳಿಗೆ ಹೊಸದಾಗಿ ಅರ್ಜಿ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಜೊತೆ ನಡೆಸಿದ ರಾಜ್ಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, “ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಈಗಾಗಲೇ ಕೆಲವರು ನಿಧನರಾಗಿದ್ದಾರೆ. ಆದರೆ ಅವರ ಹೆಸರಿನಲ್ಲಿ ಬೇರೆಯವರು ನೂರಾರು ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಅಕ್ರಮವಾಗಿ ಪಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗ್ಯಾರಂಟಿಗಳ ದುರ್ಬಳಕೆ ತಡೆಯಲು ಮರು ಪರಿಷ್ಕರಣೆ ಅತ್ಯಗತ್ಯವಾಗಿದೆ” ಎಂದರು. ಪಂಚ ಗ್ಯಾರಂಟಿಗಳಲ್ಲಿ ಯಾವುದೇ ರೀತಿಯ ಸೋರಿಕೆಯಾಗಬಾರದು, ಕೇವಲ ಅರ್ಹರಿಗೆ ಮಾತ್ರ ಯೋಜನೆಯ ಲಾಭ ತಲುಪಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಆದರೆ, ಅನರ್ಹರನ್ನು ಪತ್ತೆಹಚ್ಚಲು ಹೊಸದಾಗಿ ಅರ್ಜಿ ಪಡೆಯುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ.
ಸಭೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಮತ್ತೊಂದು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. “ಯಾರಿಗೆ ಮತದಾನದ ಹಕ್ಕು ಇರುವುದಿಲ್ಲವೋ, ಅಂತಹವರಿಗೆ ಗ್ಯಾರಂಟಿ ಯೋಜನೆಗಳು ಹಾಗೂ ಪಿಂಚಣಿ ಸೇರಿದಂತೆ ಯಾವುದೇ ಸರ್ಕಾರಿ ಸೌಲಭ್ಯಗಳು ಸಿಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
ಹೀಗಾಗಿ, ಎಸ್‌ಐಆರ್ (SIR) ಪ್ರಕ್ರಿಯೆಯ ವೇಳೆ ಅಧಿಕಾರಿಗಳು ಪ್ರತಿ ಗ್ರಾಮ ಪಂಚಾಯ್ತಿ ಮಟ್ಟಕ್ಕೆ ಖುದ್ದಾಗಿ ಭೇಟಿ ನೀಡಿ, ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಬೇಕು. ಅರ್ಹರೆಲ್ಲರೂ ಮತದಾನದ ಹಕ್ಕು ಪಡೆಯಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಒದಗಿಸಲು ಜನರಿಗೆ ನೆರವಾಗಬೇಕು ಎಂದು ಸಿಎಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.