ದಾವಣಗೆರೆ: ನಗರದ ಫಿಟ್ನೆಸ್ ಕ್ಲಬ್ಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಬಗ್ಗೆ ದೂರುಗಳು ಹಾಗೂ ಮಾಹಿತಿ ಕೇಳಿಬಂದ ಹಿನ್ನೆಲೆಯಲ್ಲಿ, ಗೃಹಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶೇಖರ್ ಹೆಚ್. ತೆಕ್ಕಣ್ಣವರ್ ಅವರೊಂದಿಗೆ ತುರ್ತು ಸಭೆ ನಡೆಸಿ, ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಮಹತ್ವದ ಸೂಚನೆ ನೀಡಲಾಗಿದೆ.
ಮಹಿಳೆಯರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ತಡೆಯಲು ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ತಕ್ಷಣದಿಂದಲೇ ಜಾರಿಗೆ ತರಲು ಆದೇಶಿಸಲಾಗಿದೆ.
ಸಿಸಿಟಿವಿ ಕಡ್ಡಾಯ ಹಾಗೂ ತಪಾಸಣೆ: ಜಿಲ್ಲೆಯಾದ್ಯಂತ ಇರುವ ಎಲ್ಲಾ ಫಿಟ್ನೆಸ್ ಕ್ಲಬ್ಗಳು, ಜಿಮ್ಗಳು, ವಾಣಿಜ್ಯ ಮಳಿಗೆಗಳು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ವ್ಯವಸ್ಥೆ, ಸುರಕ್ಷತಾ ಕ್ರಮಗಳು ಹಾಗೂ ನಿಯಮಗಳ ಪಾಲನೆ ಕುರಿತು ಪೊಲೀಸರು ಕಟ್ಟುನಿಟ್ಟಿನ ಪರಿಶೀಲನೆ ನಡೆಸಬೇಕು.
ಮಾಲೀಕರ ಸಭೆ ಮತ್ತು ಜಾಗೃತಿ: ಜಿಮ್ ಹಾಗೂ ಫಿಟ್ನೆಸ್ ಕ್ಲಬ್ಗಳ ಮಾಲೀಕರೊಂದಿಗೆ ತಕ್ಷಣವೇ ಸಭೆ ನಡೆಸಿ, ಮಹಿಳಾ ಸುರಕ್ಷತೆಯ ನಿಯಮಗಳ ಬಗ್ಗೆ ಕಟ್ಟುನಿಟ್ಟಿನ ಎಚ್ಚರಿಕೆ ಹಾಗೂ ಜಾಗೃತಿ ಮೂಡಿಸಬೇಕು.
’ಅಕ್ಕಪಡೆ’ ಸಹಾಯವಾಣಿ ಬಲವರ್ಧನೆ: ಕ್ಷೇತ್ರದಾದ್ಯಂತ ಮಹಿಳಾ ಸುರಕ್ಷತೆ ಕುರಿತು ವ್ಯಾಪಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಬೇಕು. ಇದರೊಂದಿಗೆ, ಮಹಿಳೆಯರ ತುರ್ತು ನೆರವಿಗಾಗಿ ಇರುವ “ಅಕ್ಕಪಡೆ” ಸಹಾಯವಾಣಿಯ ಕಾರ್ಯನಿರ್ವಹಣೆಯನ್ನು ಮತ್ತಷ್ಟು ಬಲಪಡಿಸಿ, ಅದರ ಪರಿಣಾಮಕಾರಿ ಕಾರ್ಯವೈಖರಿಯನ್ನು ನಿರಂತರವಾಗಿ ಪರಿಶೀಲಿಸಬೇಕು.
ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಯಾವುದೇ ಪ್ರಭಾವಕ್ಕೂ ಒಳಗಾಗದೆ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ.
“ಮಹಿಳೆಯರ ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಫಿಟ್ನೆಸ್ ಸೆಂಟರ್ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಅಸುರಕ್ಷತೆ ಎದುರಾದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.”