ಧಾರವಾಡ (ಅಣ್ಣಿಗೇರಿ) : ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ಭಾನುವಾರ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಒಂದೇ ಕುಟುಂಬದ ತಾಯಿ ಹಾಗೂ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಯೇ ಕುಸಿದು ಬಿದ್ದಿರುವ ಘಟನೆ ಅಣ್ಣಿಗೇರಿಯ ಉದಯನಗರದಲ್ಲಿ ನಡೆದಿದೆ.
ಉದಯನಗರದ ನಿವಾಸಿ ಮೊಹಮ್ಮದ್ ಅಲಿ ಧಾರವಾಡ ಎಂಬುವವರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಭಾನುವಾರ ಕುಟುಂಬಸ್ಥರೆಲ್ಲರೂ ಮನೆಯಲ್ಲಿದ್ದ ವೇಳೆ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಮನೆಯ ಗೋಡೆ ಸಂಪೂರ್ಣ ಕುಸಿದು ಬಿದ್ದಿದ್ದು, ಅದರ ಅವಶೇಷಗಳು ಅಕ್ಕಪಕ್ಕದ ಮನೆಗಳ ಮೇಲೂ ಬಿದ್ದಿವೆ. ಭಾರೀ ಶಬ್ದ ಕೇಳಿ ಆತಂಕಗೊಂಡ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಅವಶೇಷಗಳಡಿ ಸಿಲುಕಿದ್ದ ಗಾಯಾಳುಗಳ ರಕ್ಷಣೆಗೆ ಮುಂದಾಗಿದ್ದಾರೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ತಾಯಿ ಮತ್ತು ಇಬ್ಬರು ಮಕ್ಕಳನ್ನು ಸ್ಥಳೀಯರ ಸಹಾಯದಿಂದ ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ಸಾಗಿಸಿ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ತಂಡ ತೀವ್ರ ನಿಗಾ ವಹಿಸಿದೆ.
ವಿಷಯ ತಿಳಿಯುತ್ತಿದ್ದಂತೆ ಅಣ್ಣಿಗೇರಿ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ನಿಖರವಾದ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಈ ಘಟನೆ ಕುರಿತು ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.