ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯ ಲಾಡ್ಜ್ ಒಂದರಲ್ಲಿ ಬೆಂಗಳೂರು ಮೂಲದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ನಾಗಸಂದ್ರ ನಿವಾಸಿ ವರ್ಷ (23) ಮೃತಪಟ್ಟ ಯುವತಿ.
ಲಭ್ಯವಿರುವ ಮಾಹಿತಿಯ ಪ್ರಕಾರ, ವರ್ಷ ಶುಕ್ರವಾರದಂದು ತಮ್ಮ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಜೊತೆ ಪ್ರವಾಸಕ್ಕಾಗಿ ಸಕಲೇಶಪುರಕ್ಕೆ ಬಂದಿದ್ದರು. ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳನ್ನು ವೀಕ್ಷಿಸಿ ಸುತ್ತಾಡಿದ್ದರು.
ಬಳಿಕ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ ಒಂದರ ಕೊಠಡಿಯಲ್ಲಿ ಮೂವರೂ ತಂಗಿದ್ದರು. ಮಂಗಳವಾರದಂದು ಲಾಡ್ಜ್ನಲ್ಲಿ ಸ್ನಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ವರ್ಷ ದಿಢೀರ್ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ನಡೆದ ತಕ್ಷಣವೇ ರಘು ಹಾಗೂ ದರ್ಶನ್ ಸೇರಿ ಯುವತಿಯನ್ನು ಸಕಲೇಶಪುರ ತಾಲೂಕಿನ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿದ್ದರಾದರೂ, ಚಿಕಿತ್ಸೆ ಫಲಿಸದೆ ಯುವತಿ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಈ ಕುರಿತು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಯುವತಿಯ ಸಾವಿಗೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.