ಚಿತ್ತಾಪುರ (ಕಲಬುರಗಿ): ತಾಲ್ಲೂಕಿನ ದಂಡೋತಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ರಾತ್ರಿ ಊಟ ಸೇವಿಸಿದ ಹಲವು ವಿದ್ಯಾರ್ಥಿಗಳು ಏಕಾಏಕಿ ತೀವ್ರ ಹೊಟ್ಟೆ ನೋವು ಮತ್ತು ಅಸ್ವಸ್ಥತೆಯಿಂದ ಬಳಲಿದ ಘಟನೆ ಸಂಭವಿಸಿದೆ. ಕಲುಷಿತ ಆಹಾರ ಸೇವನೆಯಿಂದಾಗಿ ಈ ಫುಡ್ ಪಾಯಿಸನ್ (ಆಹಾರ ವಿಷಬಾಧೆ) ಉಂಟಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಗುರುವಾರ ರಾತ್ರಿ ವಸತಿ ಶಾಲೆಯಲ್ಲಿ ರಾತ್ರಿಯ ಊಟ ಮುಗಿಸಿದ ನಂತರ, ಆರಂಭದಲ್ಲಿ ಕೆಲವೇ ಕೆಲವು ವಿದ್ಯಾರ್ಥಿಗಳಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಆದರೆ, ನೋಡನೋಡುತ್ತಿದ್ದಂತೆ ಮತ್ತಷ್ಟು ವಿದ್ಯಾರ್ಥಿಗಳು ಇದೇ ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲಲಾರಂಭಿಸಿದರು. ಮಕ್ಕಳ ಪರಿಸ್ಥಿತಿಯನ್ನು ಕಂಡು ತಕ್ಷಣವೇ ಎಚ್ಚೆತ್ತ ಶಾಲಾ ಆಡಳಿತ ಮಂಡಳಿಯು, ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ದಂಡೋತಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದೆ.
ಬಳಿಕ ಹೆಚ್ಚಿನ ಚಿಕಿತ್ಸೆಯ ಅಗತ್ಯ ಕಂಡುಬಂದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಅಸ್ವಸ್ಥಗೊಂಡ ಎಲ್ಲಾ ವಿದ್ಯಾರ್ಥಿಗಳನ್ನು ಚಿತ್ತಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಂದಾಯ ಮತ್ತು ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ತಕ್ಷಣ ಆಸ್ಪತ್ರೆ ಹಾಗೂ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಂಬುಲೆನ್ಸ್ ವ್ಯವಸ್ಥೆಯನ್ನು ಕಲ್ಪಿಸಿ ವಿದ್ಯಾರ್ಥಿಗಳನ್ನು ಶೀಘ್ರವಾಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅಧಿಕಾರಿಗಳು ಮುತುವರ್ಜಿ ವಹಿಸಿದರು.
ಪಾಲಕರಲ್ಲಿ ಆತಂಕ – ತನಿಖೆಗೆ ಆದೇಶ
ವಸತಿ ಶಾಲೆಯ ಮಕ್ಕಳ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರಲ್ಲಿ ತೀವ್ರ ಆತಂಕ ಮನೆಮಾಡಿದೆ. ಆಹಾರದ ಗುಣಮಟ್ಟದ ಕುರಿತು ತೀವ್ರ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈಗಾಗಲೇ ತನಿಖೆಗೆ ಆದೇಶಿಸಿದ್ದಾರೆ.
”ಸದ್ಯ ಆಸ್ಪತ್ರೆಗೆ ದಾಖಲಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಚಿಕಿತ್ಸೆಯ ನಂತರ ಮಕ್ಕಳ ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡುಬಂದಿದೆ. ಯಾವುದೇ ಪ್ರಾಣಾಪಾಯವಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳ ಆರೋಗ್ಯದ ಮೇಲೆ ವೈದ್ಯರು ನಿರಂತರ ನಿಗಾ ವಹಿಸಿದ್ದಾರೆ. ಘಟನೆಗೆ ಕಾರಣವಾದ ಅಂಶಗಳ ಕುರಿತು ಸಂಪೂರ್ಣ ಪರಿಶೀಲನೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.