ಕೊಪ್ಪಳ: ಸಚಿವರಾದ ಬಸವರಾಜ ರಾಯರೆಡ್ಡಿ ಅವರು “ಎಲ್ಲಾ ಧರ್ಮಗಳಿಗಿಂತ ಇಸ್ಲಾಂ ಧರ್ಮ ಶ್ರೇಷ್ಠ” ಎಂದು ನೀಡಿರುವ ಹೇಳಿಕೆಯನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಚಲವಾದಿ ನಾರಾಯಣಸ್ವಾಮಿ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಸೋಮವಾರ ಸಂಜೆ ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರ ಈ ಹೇಳಿಕೆಯು ತುಷ್ಟೀಕರಣ ರಾಜಕಾರಣಕ್ಕೆ ಹಾಗೂ ಮೌಲ್ಯಾಧಾರಿತ ಆಡಳಿತದ ಅಧಃಪತನಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಇದು ಹಿಂದೂ ಧರ್ಮ ಹಾಗೂ ಕೋಟ್ಯಂತರ ಹಿಂದೂಗಳ ನಂಬಿಕೆಗೆ ಮಾಡಿರುವ ಅಪಮಾನವಾಗಿದ್ದು, ಸಚಿವ ರಾಯರೆಡ್ಡಿ ಅವರು ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆದು ರಾಜ್ಯದ ಜನರಲ್ಲಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ‘ಬಳ್ಳಾರಿ ಚಲೋ’
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ರೈತ ವಿರೋಧಿ ನೀತಿ, ಬರ ನಿರ್ವಹಣೆಯಲ್ಲಿನ ವೈಫಲ್ಯ, ದಲಿತ ವಿರೋಧಿ ಧೋರಣೆ, ನೇಮಕಾತಿ ಹಗರಣಗಳು ಹಾಗೂ ತುಷ್ಟೀಕರಣ ರಾಜಕಾರಣವನ್ನು ಖಂಡಿಸಿ ಅಭಿವೃದ್ಧಿ ಶೂನ್ಯ ಸರ್ಕಾರದ ಮುಖವಾಡವನ್ನು ಬಯಲುಗೊಳಿಸಲು ಬಿಜೆಪಿ ವತಿಯಿಂದ ಸೆಪ್ಟೆಂಬರ್ 1ರಿಂದ 10ರವರೆಗೆ ‘ಬಳ್ಳಾರಿ ಚಲೋ’ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾನೂನು ಸುವ್ಯವಸ್ಥೆ ಕುಸಿತ
ರಾಯಚೂರು ಜಿಲ್ಲೆಯಲ್ಲಿ ನಡೆದಿರುವ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆಗಳು ಹಾಗೂ ದಲಿತ ಮುಖಂಡರ ಹತ್ಯೆ ಪ್ರಕರಣಗಳನ್ನು ಖಂಡಿಸಿದ ಅವರು, ರಾಜ್ಯದಲ್ಲಿ ಗೃಹ ಸಚಿವರ ವೈಫಲ್ಯದಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ದಲಿತರು ಹಾಗೂ ಶೋಷಿತರಿಗೆ ರಕ್ಷಣೆ ಇಲ್ಲದಂತಾಗಿದೆ. ಘಟನೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು, ಸಂತ್ರಸ್ತರಿಗೆ ತಕ್ಷಣ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಹೇಮಲತಾ ನಾಯಕ್, ಮುಖಂಡರಾದ ಆರ್. ರುದ್ರಯ್ಯ, ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ಮಹಾಂತೇಶ ಪಾಟೀಲ ಮೈನಳ್ಳಿ, ಗಣೇಶ ಹೊರಟ್ನಾಳ, ಮಂಜುನಾಥ ಮುಸಲಾಪುರು, ಸುನಿಲ ಹೆಸರೂರು, ಅಮರೇಶ ಮುರಳಿ, ಕನಕಪ್ಪ, ಸೋಮಣ್ಣ ಹಳ್ಳಿ, ರಘು ಚಾಕ್ರಿ, ರಾಜು ವಸ್ತ್ರದ ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.