ಮಂಗಳೂರು: ನಗರದ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಖದೀಮನನ್ನು ಮಂಗಳೂರು ಸಿಸಿಬಿ ಪೊಲೀಸರು ಜೂನ್ 25ರಂದು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯು ಹೊರಗಿನಿಂದ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ ತಂದು, ಕುಳಾಯಿ ಗುಡ್ಡೆ ಪರಿಸರದಲ್ಲಿರುವ ತನ್ನ ಮನೆಯನ್ನೇ ಅಡ್ಡೆ ಮಾಡಿಕೊಂಡಿದ್ದ. ಅಲ್ಲಿಂದಲೇ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿರುವ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಸಿಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ಜೂನ್ 25ರಂದು ಮನೆಯ ಮೇಲೆ ದಾಳಿ ನಡೆಸಿ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತ ಆರೋಪಿಯಿಂದ ಅಕ್ರಮವಾಗಿ ಇಟ್ಟುಕೊಂಡಿದ್ದ ₹1,50,000 ಮೌಲ್ಯದ 15 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. ಇದರೊಂದಿಗೆ ಡ್ರಗ್ಸ್ ದಂಧೆಗೆ ಬಳಸುತ್ತಿದ್ದ ಮೊಬೈಲ್ ಫೋನ್, ಜಿಪ್ ಲಾಕ್ ಕವರ್‌ಗಳು ಹಾಗೂ ಡಿಜಿಟಲ್ ತೂಕ ಮಾಪನ ಯಂತ್ರವನ್ನು (Digital Weighing Scale) ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ ₹2,10,500 ಎಂದು ಪೊಲೀಸರು ತಿಳಿಸಿದ್ದಾರೆ.
ಈ ಯಶಸ್ವಿ ಕಾರ್ಯಾಚರಣೆಯ ಬಳಿಕ ಬಂಧಿತ ಆರೋಪಿ ಮತ್ತು ವಶಪಡಿಸಿಕೊಂಡ ಸೊತ್ತುಗಳನ್ನು ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲಾಗಿದ್ದು, ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.