ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ವೊಂದರಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಪಣಂಬೂರು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಬಾಂಗ್ಲಾದೇಶ ಮೂಲದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ವಶಕ್ಕೆ ಪಡೆಯಲಾದ ವ್ಯಕ್ತಿಗಳು. ಪಣಂಬೂರು ಬೀಚ್ ಬಳಿಯ ರೆಸ್ಟೋರೆಂಟ್ನಲ್ಲಿ ವಿದೇಶಿ ಪ್ರಜೆಗಳು ಅಕ್ರಮವಾಗಿ ವಾಸವಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಗಡಿಪಾರು ಪ್ರಕ್ರಿಯೆ ಆರಂಭ:
ವಶಕ್ಕೆ ಪಡೆದ ಇಬ್ಬರೂ ಬಾಂಗ್ಲಾದೇಶಿ ಪ್ರಜೆಗಳನ್ನು ಸದ್ಯ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿ (Detention Centre) ಇರಿಸಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಕಾನೂನು ಪ್ರಕ್ರಿಯೆಯ ಭಾಗವಾಗಿ ಇವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಿ, ಸ್ವದೇಶಕ್ಕೆ (ಬಾಂಗ್ಲಾದೇಶಕ್ಕೆ) ಗಡಿಪಾರು ಮಾಡಲು ಪೊಲೀಸರು ಅಗತ್ಯ ಕ್ರಮಗಳನ್ನು ಆರಂಭಿಸಿದ್ದಾರೆ.
ಪಣಂಬೂರು ಪೊಲೀಸ್ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ್ ಹಾಗೂ ಠಾಣೆಯ ಇತರ ಸಿಬ್ಬಂದಿ ಪಾಲ್ಗೊಂಡಿದ್ದರು.