ಬೆಂಗಳೂರು: ಮಹಿಳೆಯೊಬ್ಬರ ಖಾಸಗಿ ವಿಡಿಯೋ ಚಿತ್ರೀಕರಿಸಿ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಡಿಫಾಲ್ಟ್ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ವಿಶೇಷ ತನಿಖಾ ದಳಕ್ಕೆ (SIT) ನೋಟಿಸ್ ಜಾರಿ ಮಾಡಿದೆ.
ವಿಚಾರಣಾ ನ್ಯಾಯಾಲಯವು ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ನ್ಯಾಯಪೀಠವು, “ಇದು ಯಾವ ಆಧಾರದ ಮೇಲೆ ಸಲ್ಲಿಕೆಯಾಗಿರುವ ಜಾಮೀನು ಅರ್ಜಿ?” ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಅರ್ಜಿದಾರರ ಪರ ವಕೀಲರು, “ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳವು (SIT) ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದೆ. ತನಿಖೆ ಪೂರ್ಣಗೊಂಡಿರುವುದರಿಂದ ನಿಯಮಾನುಸಾರ ಡಿಫಾಲ್ಟ್ ಜಾಮೀನು ಮಂಜೂರು ಮಾಡಬೇಕು,” ಎಂದು ಕೋರಿದರು.
ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಈ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಎಸ್‌ಐಟಿಗೆ ಸೂಚಿಸಿ ನೋಟಿಸ್ ಜಾರಿಗೊಳಿಸಿತಲ್ಲದೆ, ಮುಂದಿನ ವಿಚಾರಣೆಯನ್ನು ಜುಲೈ 3ಕ್ಕೆ ಮುಂದೂಡಿದೆ.
ಕಳೆದ 2019ರಲ್ಲಿ ವಿಶ್ವವಿದ್ಯಾನಿಲಯವೊಂದರಲ್ಲಿ ತನ್ನ ಪುತ್ರನಿಗೆ ಸೀಟು ಕೊಡಿಸುವಂತೆ ಸಹಾಯ ಕೋರಿ ಸಂತ್ರಸ್ತ ಮಹಿಳೆಯೊಬ್ಬರು ಆಗಿನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಪರ್ಕಿಸಿದ್ದರು. ಈ ವೇಳೆ ಮಹಿಳೆಯ ಮೊಬೈಲ್ ಸಂಖ್ಯೆ ಪಡೆದಿದ್ದ ಪ್ರಜ್ವಲ್, ಆ ಬಳಿಕ ಅವರಿಗೆ ಕರೆ ಮಾಡಿ ವಿವಸ್ತ್ರವಾಗಿ ವಿಡಿಯೋ ಕಾಲ್ ಮಾಡುವಂತೆ ಪೀಡಿಸಿದ್ದರು ಎನ್ನಲಾಗಿದೆ.
ಅಷ್ಟೇ ಅಲ್ಲದೆ, ಮಹಿಳೆಯ ಅನುಮತಿ ಇಲ್ಲದೆಯೇ ಆ ವಿಡಿಯೋಗಳನ್ನು ರೆಕಾರ್ಡ್ ಮಾಡಿಟ್ಟುಕೊಂಡಿದ್ದ ಪ್ರಜ್ವಲ್ ರೇವಣ್ಣ, ತಾನು ಕರೆ ಮಾಡಿದಾಗ ಫೋನ್ ಸ್ವೀಕರಿಸದಿದ್ದರೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಗೊಳಿಸುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಎಸ್‌ಐಟಿ, ತನಿಖೆ ನಡೆಸಿ ಇತ್ತೀಚೆಗಷ್ಟೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿತ್ತು.