ಶಿವಮೊಗ್ಗ: ಸಹಪಾಠಿಗಳು ಚೆಸ್ ಆಡುತ್ತಿದ್ದನ್ನು ಆಸಕ್ತಿಯಿಂದ ವೀಕ್ಷಿಸುತ್ತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ತಮ್ಮಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ ವಿನಯ್ ಜೆ.ಕೆ. (15) ಮೃತಪಟ್ಟ ದುರದೃಷ್ಟಕರ ವಿದ್ಯಾರ್ಥಿ.
ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಕೊನೆಯುಸಿರು:
ಶಾಲೆಯಲ್ಲಿ ಆಟ ವೀಕ್ಷಿಸುತ್ತಿದ್ದ ವೇಳೆ ವಿದ್ಯಾರ್ಥಿ ಏಕಾಏಕಿ ಅಸ್ವಸ್ಥಗೊಂಡು ನೆಲಕ್ಕೆ ಕುಸಿದು ಬಿದ್ದಿದ್ದಾನೆ. ಇದನ್ನು ಗಮನಿಸಿದ ಶಿಕ್ಷಕರು ತಕ್ಷಣವೇ ಆತನನ್ನು ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಪ್ರಥಮ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಆಸ್ಪತ್ರೆ ತಲುಪುವಷ್ಟರಲ್ಲೇ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಅಜ್ಜನ ಮನೆಯಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕ:
ಮೃತ ವಿನಯ್ ಮೂಲತಃ ಶಿಕಾರಿಪುರ ತಾಲೂಕಿನವನಾಗಿದ್ದು, ತಮ್ಮಡಿಹಳ್ಳಿಯಲ್ಲಿರುವ ಅಜ್ಜನ ಮನೆಯಲ್ಲಿ ವಾಸವಿದ್ದು ಪ್ರೌಢಶಾಲೆ ಶಿಕ್ಷಣ ಪಡೆಯುತ್ತಿದ್ದ. ಬಾಲಕನ ಸಾವು ಕುಟುಂಬಸ್ಥರು ಹಾಗೂ ಶಾಲಾ ಸಿಬ್ಬಂದಿ, ಸಹಪಾಠಿಗಳಲ್ಲಿ ತೀವ್ರ ಶೋಕ ತಂದೊಡ್ಡಿದೆ.
ಘಟನೆಗೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿಯ ಹಠಾತ್ ಸಾವಿಗೆ ನಿಖರ ಕಾರಣ ತಿಳಿಯಲು ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆ ಕೈಗೊಂಡಿದ್ದಾರೆ.