ಶಿವಮೊಗ್ಗ: ಹೆತ್ತವರ ಆಶಾಕಿರಣವಾಗಿದ್ದ ಆರು ವರ್ಷದ ಕಂದಮ್ಮನೊಬ್ಬ ಶಾಲಾ ಆವರಣದಲ್ಲೇ ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪಿರುವ ಅತ್ಯಂತ ದುರದೃಷ್ಟಕರ ಮತ್ತು ಮನಕಲಕುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಸಂಭವಿಸಿದೆ.
ಸಾಗರ ತಾಲೂಕಿನ ಕರೂರು ಹೋಬಳಿಯ ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ ತ್ರಿಲೋಕ್ ಜೈನ್ (6) ಮೃತಪಟ್ಟ ದುರ್ದೈವಿ ಬಾಲಕನಾಗಿದ್ದಾನೆ. ಈತ ಕೊಡನವಳ್ಳಿ ಗ್ರಾಮದ ನಿವಾಸಿಗಳಾದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರ.
ಕಳೆದ ಶನಿವಾರ ಮಧ್ಯಾಹ್ನ ಶಾಲೆ ಮುಗಿಯುವ ಸಮಯದಲ್ಲಿ, ಎಂದಿನಂತೆ ಸಹಪಾಠಿಗಳೊಂದಿಗೆ ಆಟವಾಡಿಕೊಂಡಿದ್ದ ಬಾಲಕ ತ್ರಿಲೋಕ್, ಶಾಲಾ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾನೆ. ಇದನ್ನು ಕಂಡು ಗಾಬರಿಗೊಂಡ ಶಾಲಾ ಶಿಬ್ಬಂದಿ ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮುನ್ನವೇ ಮಾರ್ಗಮಧ್ಯೆ ಆ ಕಂದಮ್ಮ ಕೊನೆಯುಸಿರೆಳೆದಿದ್ದಾನೆ. ಈ ಹೃದಯವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆಟವಾಡುವ ವಯಸ್ಸಿನಲ್ಲೇ ಮಗ ಹೃದಯಾಘಾತಕ್ಕೆ ಒಳಗಾಗಿ ಇಹಲೋಕ ತ್ಯಜಿಸಿದ್ದನ್ನು ಕೇಳಿ ಹೆತ್ತ ಕರುಳು ಚೂರಾಗಿದೆ. ಹೆತ್ತವರ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮವೇ ಕಣ್ಣೀರಲ್ಲಿ ಮುಳುಗಿದೆ. ಬಾಲಕನ ಅಕಾಲಿಕ ನಿಧನಕ್ಕೆ ಗ್ರಾಮಸ್ಥರು, ಶಾಲಾಭಿವೃದ್ಧಿ ಸಮಿತಿ (SDMC) ಸದಸ್ಯರು ಹಾಗೂ ಮುಖ್ಯ ಶಿಕ್ಷಕರು ತೀವ್ರ ಕಂಬನಿ ಮಿಡಿದಿದ್ದಾರೆ.