ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೀದಿ ನಾಯಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ನಾಯಿ ಕಡಿತದ ಇತ್ತೀಚಿನ ಅಂಕಿ-ಅಂಶಗಳು ಸಾರ್ವಜನಿಕ ವಲಯವನ್ನು ಬೆಚ್ಚಿಬೀಳಿಸುವಂತಿವೆ.
ಜನವರಿ ತಿಂಗಳಿನಿಂದ ಈವರೆಗೆ ಇಡೀ ರಾಜ್ಯದಲ್ಲಿ ಬರೋಬ್ಬರಿ 2,66,367 ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು, ರೇಬಿಸ್ ಸೇರಿದಂತೆ ವಿವಿಧ ಭೀಕರ ಸೋಂಕಿನಿಂದಾಗಿ 30 ಜನ ಸಾವನ್ನಪ್ಪಿದ್ದಾರೆ. ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿ ಎಂಬಂತೆ, ಕೇವಲ ಒಂದು ವಾರದ ಅವಧಿಯಲ್ಲೇ 13,220 ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಬಲಿಯಾಗಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಕಾಟ ಮಿತಿಮೀರಿದ್ದು, ಕಳೆದ 5 ತಿಂಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 9,763 ನಾಯಿ ಕಡಿತದ ಪ್ರಕರಣಗಳು ದಾಖಲಾಗಿವೆ.
ನಾಯಿ ಕಡಿತದ ಪ್ರಕರಣಗಳು ದಿಢೀರ್ ಜಿಗಿತ ಕಂಡಿರುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಆಂಟಿ ರೇಬಿಸ್ ಲಸಿಕೆಗೆ (Anti-Rabies Vaccine) ಬೇಡಿಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಬೆಂಗಳೂರಿನ ಪ್ರಮುಖ ಕೆ.ಸಿ. ಜನರಲ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ನಿತ್ಯ 60 ರಿಂದ 70 ರೋಗಿಗಳು ಲಸಿಕೆಗಾಗಿ ಆಗಮಿಸುತ್ತಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ಮತ್ತು ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಲಸಿಕೆಗಳ ಸಂಗ್ರಹವನ್ನು ಹೆಚ್ಚಿಸುವಂತೆ ಸೂಚನೆ ನೀಡಿದೆ.
ನಾಯಿ ಕಡಿತಕ್ಕೆ ಒಳಗಾದವರು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು ಎಂದು ತಜ್ಞ ವೈದ್ಯರು ಎಚ್ಚರಿಸಿ
“ನಾಯಿ ಕಚ್ಚಿದ ತಕ್ಷಣ ಗಾಯವನ್ನು ನಿರ್ಲಕ್ಷಿಸದೆ, ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಂಟಿ ರೇಬಿಸ್ ಲಸಿಕೆಯನ್ನು ಪಡೆದುಕೊಳ್ಳಬೇಕು. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದರಿಂದ ರೇಬಿಸ್ನಂತಹ ಮಾರಕ ಹಾಗೂ ಪ್ರಾಣಾಂತಿಕ ಸೋಂಕಿನಿಂದ ಜೀವ ಉಳಿಸಿಕೊಳ್ಳಲು ಸಾಧ್ಯ.”
ಒಟ್ಟಾರೆಯಾಗಿ ರಾಜ್ಯದಲ್ಲಿ ನಾಯಿಗಳ ದಾಳಿ ನಿರಂತರವಾಗಿ ಹೆಚ್ಚುತ್ತಿರುವುದು ನಾಗರಿಕರ ನೆಮ್ಮದಿ ಕೆಡಿಸಿದ್ದು, ಸ್ಥಳೀಯ ಸಂಸ್ಥೆಗಳು ಹಾಗೂ ಬಿಬಿಎಂಪಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.