ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯ ಮಾಟನಹಳ್ಳಿ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ.
ಗ್ರಾಮದ ನಿವಾಸಿಗಳಾದ ವೆಂಕಟರಮಣಗೌಡ ಮತ್ತು ಸಣ್ಣತಿಮ್ಮೇಗೌಡ ಎಂಬುವವರಿಗೆ ಸೇರಿದ ಮನೆಗಳಲ್ಲಿ ಈ ಅವಘಡ ಸಂಭವಿಸಿದೆ. ಭಾರತ್ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಮನೆಗೆ ಆವರಿಸಿದೆ. ನಿನ್ನೆ ಸಂಜೆ ಸಂಭವಿಸಿದ ಈ ಘಟನೆಯು ತಡವಾಗಿ ಬೆಳಕಿಗೆ ಬಂದಿದೆ.
ಈ ಭೀಕರ ಅಗ್ನಿ ಅವಘಡದಲ್ಲಿ ಮನೆಗಳಲ್ಲಿದ್ದ ಸುಮಾರು 15 ಸಾವಿರ ಕೊಬ್ಬರಿ, ಲಕ್ಷಾಂತರ ರೂಪಾಯಿ ನಗದು, ಬೆಲೆಬಾಳುವ ಚಿನ್ನಾಭರಣ ಹಾಗೂ ಸಂಗ್ರಹಿಸಿಟ್ಟಿದ್ದ ಆಹಾರ ಧಾನ್ಯಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ವಿಷಯ ತಿಳಿದು ಸ್ಥಳಕ್ಕೆ ಧಾವಿಸುವಷ್ಟರಲ್ಲೇ ಮನೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದವು. ಪರಿಣಾಮವಾಗಿ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ.
ಘಟನಾ ಸ್ಥಳಕ್ಕೆ ನೊಣವಿನಕೆರೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಈ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡಕ್ಕೆ ನಿಖರವಾದ ತಾಂತ್ರಿಕ ಕಾರಣಗಳ ಬಗ್ಗೆ ತನಿಖೆ ಮುಂದುವರಿದಿದೆ.