ಯಾದಗಿರಿ: ನಗರದಲ್ಲಿ ಇತ್ತೀಚೆಗೆ ನಡೆದ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರದಂತಹ ಅಮಾನವೀಯ ಮತ್ತು ಹೇಯ ಕೃತ್ಯವು ಅತ್ಯಂತ ಆಘಾತಕಾರಿ ಹಾಗೂ ಖಂಡನೀಯವಾಗಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದ್ರಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಿಳಾ ಆಯೋಗವು, ಘಟನೆಯ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಶೀಘ್ರವೇ ಸತ್ಯಾಂಶವನ್ನು ಹೊರತರುವಂತೆ ಸಂಬಂಧಪಟ್ಟ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಧ್ಯಕ್ಷರು, “ಮಹಿಳೆಯರ ಸುರಕ್ಷತೆ ಮತ್ತು ಘನತೆಗೆ ಧಕ್ಕೆ ತರುವ ಇಂತಹ ಕ್ರೂರ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳಾಗಿದ್ದರೂ ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಜರುಗಿಸಬೇಕು. ಜೊತೆಗೆ ಸಂತ್ರಸ್ತೆಗೆ ಅಗತ್ಯ ವೈದ್ಯಕೀಯ, ಕಾನೂನು ನೆರವು ಹಾಗೂ ಪೂರ್ಣ ಪ್ರಮಾಣದ ಭದ್ರತೆ ಒದಗಿಸಬೇಕು” ಎಂದು ಸೂಚಿಸಿದ್ದಾರೆ.
ಮಹಿಳೆಯರ ಗೌರವ, ಸುರಕ್ಷತೆ ಮತ್ತು ಹಕ್ಕುಗಳ ರಕ್ಷಣೆಯ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಬಾರದು. ಇಂತಹ ಗಂಭೀರ ಪ್ರಕರಣಗಳಲ್ಲಿ ಕಾನೂನು ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು ಅತ್ಯಗತ್ಯ ಎಂದು ಅವರು ಒತ್ತಿ ಹೇಳಿದ್ದಾರೆ.