ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ಮುನ್ನೆಲೆಗೆ ಬರುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೊಪ್ಪಳದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದರೆ ರಾಜ್ಯಕ್ಕೆ ದೊಡ್ಡ ಅಪಾಯ ಕಾದಿದೆ ಎಂದು ಭವಿಷ್ಯ ನುಡಿದರು. “ಒಂದು ವೇಳೆ ಡಿ.ಕೆ. ಶಿವಕುಮಾರ್ ಸಿಎಂ ಪಟ್ಟಕ್ಕೇರಿದರೆ, ಅವರು ಕರ್ನಾಟಕವನ್ನು ಹತ್ತು ಬಾರಿ ಮಾರಾಟ ಮಾಡುತ್ತಾರೆ” ಎಂದು ಲೇವಡಿ ಮಾಡಿದರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ಹರಿಹಾಯ್ದ ಯತ್ನಾಳ್, “ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಬಾರಿ ಕರ್ನಾಟಕವನ್ನು ಮಾರಾಟ ಮಾಡಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಸದ್ದು ಕೇಳಿಬರುತ್ತಿರುವ ಈ ಸಂದರ್ಭದಲ್ಲಿ ಯತ್ನಾಳ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.